ಮಂಗಳೂರು

ಡಿಸೆಂಬರ್ 06: ಬಾಬರಿ ಮಸೀದಿಯನ್ನು ಡಿಸೆಂಬರ್ 6 ರಂದು ಧ್ವಂಸಗೊಳಿಸಲಾಯಿತು. ಈ ದಿನದಂದು ವಿಜಯೋತ್ಸವ ಮತ್ತು ಕರಾಳ ದಿನ ಆಚರಣೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಆದೇಶ ಹೊರಡಿಸಿದ್ದಾರೆ. ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಣೆಗೆ ಮುಂದಾದರೆ, ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಣೆಗೆ ಮುಂದಾಗುವ ಸಾಧ್ಯತೆ ಬಗ್ಗೆ ಮಾಹಿತಿ ಇರುವ ಹಿನ್ನೆಲೆಯಲ್ಲಿ ಈ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಇಂದು ಅಹಿತಕರ ಘಟನೆಗಳು ಸಂಭವಿಸುವ ಮಾಹಿತಿ ಇದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ವರದಿ ನೀಡಿದ್ದಾರೆ. ಅದನ್ನು ಆಧರಿಸಿ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಸೆಕ್ಷನ್ 35ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ಇಂದು ಗುರುವಾರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಸ್ತೆ ರೋಕೊ ಮತ್ತು ಮುತ್ತಿಗೆ ಮುಂತಾದವುಗಳನ್ನು ನಿರ್ಬಂಧಿಸಲಾಗಿದೆ.

ಶಾಂತಿ ಸುವ್ಯವಸ್ಥೆಗೆ ಭಂಗ ತಬರುವಂತಹ ಘಟನೆಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ ಕರ್ನಾಟಕ ಪೊಲೀಸ್ ಕಾಯ್ದೆ 1993 ಕಲಂ 35ರ ಅನ್ವಯ ನಿರ್ಬಂಧಕಾಜ್ಞೆ ಹೊರಡಿಸಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here